Wednesday, 8 April 2015

ನನ್ನವಳು ನನ್ನೆದೆಯ ಹೊನ್ನಾಡನಾಳುವಳು / Nannavalu nannedeya honnadanaaluvalu

ನನ್ನವಳು ನನ್ನೆದೆಯ ಹೊನ್ನಾಡನಾಳುವಳು
ಬೆಳಗುಗೆನ್ನೆಯ ಚೆನ್ನೆ ನನ್ನ ಮಡದಿ||ಪ||

ಹೊಳೆಯ ಸುಳಿಗಳಿಗಿಂತ ಆಳಗಣ್ಣಿನ ಚೆಲುವು
ಅವಳೊಮ್ಮೆ ಹೆರಳ ಕೆದರಿ ಕಪ್ಪುಗುರುಳನ್ನು
ಬೆನ್ನ ಮೇಲೆಲ್ಲ ಹರಡಿದರೆ…
ದೂರದಲಿ, ಗಿರಿಯ ಮೇಲೆ ಇಳಿದಂತೆ ಇರುಳ ಮಾಲೆ
ಇಳಿದಂತೆ ಇರುಳ ಮಾಲೆ.

ಕರೆದಾಗ ತೌರು ಮನೆ, ನೆನೆದಾಗ ನನ್ನ ಮನೆ
ಹಳ್ಳಿಯೆರಡರ ಮುದ್ದು ಬಳ್ಳಿ ಅವಳು
ಮುಚ್ಚು ಮರೆ ಇಲ್ಲದೆ ಅಚ್ಚ ಮಲ್ಲಿಗೆಯಂತೆ
ಅರಳುತಿಹುದು ಅವಳ ಬದುಕು
ಬಂಗಾರದೊಡವೆಗಳ ಬಯಸಿಲ್ಲ ಮನಸಿನಲಿ
ಬಂಗಾರದಂತ ಹುಡುಗಿ
ನನ್ನೊಡವೆ, ನನ್ನ ಬೆಡಗಿ.

ಹಸಿರು ಸೀರೆಯನುಟ್ಟು, ಕೆಂಪು ಬಳೆಗಳ ತೊಟ್ಟು
ತುಂಬು ದನಿಯಲಿ ಕರೆವಳೆನ್ನ ಚೆಲುವೆ
ಹಣೆಯನಾಳುವುದು ಅವಳ ಕುಂಕುಮದ ನಿಡುವಟ್ಟು
ಲಕ್ಷ್ಮಿ ಅವಳೆನ್ನ ಮನೆಗೆ
ನಮಗಿದುವೇ ಸೊಗಸು ಬದುಕಿನ ಬಣ್ಣಗಳಾ ಸಂತೆ
ನಮಗಿಲ್ಲ ನೂರು ಚಿಂತೆ,ನಾವು ಗಂಧರ್ವರಂತೆ
ನಾವು ಗಂಧರ್ವರಂತೆ.

                                                                          - ಕೆ. ಎಸ್. ನರಸಿಂಹ ಸ್ವಾಮಿ 

* ಕೆ.ಎಸ್.ನ ಅವರ ಇರುವಂತಿಗೆ ಕವನಸಂಕಲನದ ಒಂದು ಮಾರ್ದವತೆ ತುಂಬಿದ ಕವನ. 1968 ರಲ್ಲಿ ಬಂದ ಸರ್ವಮಂಗಳ ಚಿತ್ರಕ್ಕೆ ಬಳಕೆಯಾಗಿದೆ.

Monday, 6 April 2015

ಅಂಥಿಂಥ ಹೆಣ್ಣು ನೀನಲ್ಲ / Anthintha hennu neenalla

ಅಂಥಿಂಥ ಹೆಣ್ಣು ನೀನಲ್ಲ;
ನಿನ್ನಂಥ ಹೆಣ್ಣು ಇನ್ನಿಲ್ಲ.

ಹೆಡೆಹೆಡೆಯ ಸಾಲು ತುರುಬೆಲ್ಲ,
ಗುಡಿನಿಂದ ಹೂವು ಮೇಲೆಲ್ಲ,
ತೆರೆತೆರೆಯ ಹೊರಳು ಕುರುಳೆಲ್ಲ,
ಸುಳಿಮಿಂಚು ಕಣ್ಣ ಹೊರಳೆಲ್ಲ!

ಮಣಿಮಲೆ ಕೊರಳ ದನಿಯೆಲ್ಲ,
ಹೊಂಬಾಳೆ ಆಸೆ ಒಳಗೆಲ್ಲ.
ಒತ್ತಾಯವಿಲ್ಲ: ಒಲವೆಲ್ಲ!
ನಿನ್ನಂಥ ಹೆಣ್ಣು ಹಲವಿಲ್ಲ.

ಎದೆಮಟ್ಟ ನಿಂತ ಹೂ ಬಳ್ಳಿ;
ಎಷ್ಟೊಂದು ಹೂವು ಅದರಲ್ಲಿ!
ಉಸಿರುಸಿರು ಮೊಗ್ಗು ಹೂವೆಲ್ಲ;
ನೀ ಬಳ್ಳಿ ಬೆಳಕು ಬದುಕೆಲ್ಲ!

ನಡುಬೆಟ್ಟದಲ್ಲಿ ನಿನ್ನೂರು;
ಅಲ್ಲಿಹವು ನವಿಲು ಮುನ್ನೂರು.
ಮುನ್ನೂರು ನವಿಲು ಬಂದಂತೆ
ನೀ ಬಂದರೆನಗೆ; ಸಿರಿವಂತೆ.

ನಡುದಾರಿಯಲ್ಲಿ ನನ್ನೂರು;
ಕುಡಿಮಿಂಚಿನೂರು ಹೊನ್ನೂರು
ಮುನ್ನೂರು ಮೆಂಚು ಹೊಳೆದಂತೆ
ನೀ ಬಂದರೆನಗೆ, ಸಿರಿವಂತೆ.

ಬಲುದೂರ ದೂರ ನೀನಾಗಿ,
ಹೊಂಗನಸು ನಡುವೆ ದನಿತೂಗಿ,
ಕಾದಿರಲು ನಾನು ನಿನಗಾಗಿ
ನೀ ಬರುವೆ ಚೆಲುವೆ ಹೊಳೆಯಾಗಿ.

ಏನಂಥ ಚೆಲುವೆ ನೀನಲ್ಲ.
ನೀನಲ್ಲ? ಚೆಲುವೆ ಇನ್ನಿಲ್ಲ!
ಹಾಡಲ್ಲ, ನೀನು ಕನಸಲ್ಲ;
ನಿನ್ನಿಂದ ಹಾಡು ಕನಸೆಲ್ಲ.

                                                    - ಕೆ. ಎಸ್. ನರಸಿಂಹಸ್ವಾಮಿ

Sunday, 5 April 2015

ಹಾಡು ಹಳೆಯದಾದರೇನು / Haadu haleyadaadarenu

ಹಾಡು...ಹಾಡು ...ಹಾಡು ಹಳೆಯದಾದರೇನು ಭಾವ ನವನವೀನ..
ಎದೆಯ ಭಾವ ಹೊಮ್ಮುವುದಕೆ ಭಾಷೆ ಒರಟು ಯಾನ....
ಹಳೆಯ ಹಾಡು ಹಾಡು ಮತ್ತೆ ಅದನೆ ಕೇಳಿ ತಣಿಯುವೆ
 ಹಳೆಯ ಹಾಡಿನಿಂದ ಹೊಸತು ಜೀವನಾ ಕಟ್ಟುವೆ.....
ಹಮ್ಮು ಬಿಮ್ಮು ಒಂದೂ ಇಲ್ಲ ಹಾಡು ಹೃದಯ ತೆರೆದಿದೆ
 ಹಾಡಿನಲ್ಲಿ ಲೀನವಾಗಲೆನ್ನ ಮನವು ಕಾದಿದೆ......
                                                                                 - ಜಿ.ಎಸ್.ಶಿವರುದ್ರಪ್ಪ